ಮಂಗಳೂರು: ಧರ್ಮಸ್ಥಳದಲ್ಲಿ ಅಮಾನವೀಯವಾಗಿ 14 ವರ್ಷಗಳ ಹಿಂದೆ ಹತ್ಯೆಗೆ ಒಳಗಾದ ಸೌಜನ್ಯ ಪ್ರಕರಣದ ಬಗ್ಗೆ ಯೂಟ್ಯೂಬರ್ ಸಮೀರ್ ಎಂಬಾತ ವಿಡಿಯೋ ಮಾಡಿ ಸಾರ್ವಜನಿಕ ವಲಯದಲ್ಲಿ ಪರ – ವಿರೋಧ ಚರ್ಚೆಗಳು ನಡೆದ ಬೆನ್ನಲ್ಲೇ ಪೊಲೀಸ್ ಇಲಾಖೆ ಚುರುಕಾಗಿದೆ.
ರಾಜ್ಯದ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಅವರು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವಿಶೇಷ ಸೂಚನೆ ನೀಡಿದ್ದು, ಜಿಲ್ಲಾ ಪೊಲೀಸ್ ವಿಭಾಗಗಳಲ್ಲಿ ರಚನೆ ಮಾಡಲಾಗಿರುವ ಸಾಮಾಜಿಕ ಜಾಲತಾಣಗಳ ಘಟಕಗಳನ್ನು ಮತ್ತಷ್ಟು ಚುರುಕುಗೊಳಿಸುವಂತೆ ಸೂಚಿಸಿದ್ದಾರೆ.
ಪೊಲೀಸ್ ವಿಭಾಗಗಳ ಸಾಮಾಜಿಕ ಜಾಲತಾಣ ಘಟಕಗಳು ಸಮೀರ್ ವಿಡಿಯೋ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಸದ್ದು ಮಾಡಿದ್ದರೂ ಇಲಾಖೆಯ ಗಮನಕ್ಕೆ ತಾರದೆ ನಿರ್ಲಕ್ಷ್ಯ ತೋರಿವೆ. ಇದರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುವ ಸಾಧ್ಯತೆ ಇದೆ. ಹೀಗಾಗಿ ಇಲಾಖೆಯ ಸಾಮಾಜಿಕ ಜಾಲತಾಣ ಘಟಕಗಳು ಮತ್ತಷ್ಟು ಚುರುಕಿನಿಂದ ಕೆಲಸ ಮಾಡಬೇಕಿದೆ ಎಂದು ಹಿತೇಂದ್ರ ಅವರು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.