ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಅವರ ಮಲ ತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ಪಾತ್ರ ಇದೆಯೇ? ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಪ್ರಕರಣದ ಈ ಬೆಳವಣಿಗೆಗೆ ಸಂಬಂಧಿಸಿದ ಹಾಗೆ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಮಾತನಾಡಿದ್ದು, ಪ್ರಕರಣದ ತನಿಖೆಯನ್ನು ಸಿಬಿಐ ಮಾಡುತ್ತಿದ್ದು, ಇದರ ಬಗ್ಗೆ ಏನನ್ನೂ ಮಾತನಾಡಲು ಸಾಧ್ಯವಿಲ್ಲ ಎಂದಿದ್ದಾರೆ. ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿ ಬಳಿಕ ಯಾತಕ್ಕಾಗಿ ಹಿಂಪಡೆಯಿತು ಎನ್ನುವುದು ತಿಳಿಯುತ್ತಿಲ್ಲ. ರನ್ಯಾ ಸೆಲೆಬ್ರೆಟಿಯಾಗಿದ್ದಾರೆ. ಅವರ ತಂದೆ ರಾಮಚಂದ್ರ ರಾವ್ ಅವರು ಹಿರಿಯ ಪೊಲೀಸ್ ಅಧಿಕಾರಿಯಾಗಿದ್ದಾರೆ. ತನಿಖೆ ಮುಗಿದು ಸತ್ಯ ಹೊರಬರುವ ವರೆಗೆ ರನ್ಯಾ ತಂದೆಯ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.