ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಸ್ಪೀಕರ್ ಯು.ಟಿ ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಗಣಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಇರುವ ಅಡೆತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಿಯಮಗಳಲ್ಲಿ ಬದಲಾವಣೆಗಳನ್ನು ತರುವ ಕುರಿತಂತೆ ಗಣಿ ಇಲಾಖೆ ಅಧಿಕಾರಿಗಳೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಚರ್ಚೆ ನಡೆಸಿದ್ದಾರೆ.
ವಾಣಿಜ್ಯ ಉದ್ದೇಶವಲ್ಲದ ಕೆಂಪುಕಲ್ಲು ಕ್ವಾರಿಗಳಿಗೆ ಅಧಿಕೃತವಾಗಿ ಪರವಾನಿಗೆ ಕೊಡುವ ವ್ಯವಸ್ಥೆ ಜಾರಿಯಾಗಬೇಕು. ಪರವಾನಿಗೆ ಪಡೆಯಲು ಏಕಗವಾಕ್ಷಿ ಯೋಜನೆ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಸಮಯಮಿತಿಯಲ್ಲಿ ಪರವಾನಿಗೆಗಳನ್ನು ಕೊಡುವ ಕಾರ್ಯಗತಿ ಜಾರಿಗೆ ತರುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಕೆಂಪುಕಲ್ಲು ಉತ್ಪಾದಕರೊಂದಿಗೆ ಚರ್ಚೆ ನಡೆಸಿ ವಾರದೊಳಗೆ ಹೊಸ ನೀತಿ ಜಾರಿಗೊಳಿಸುವತ್ತ SOP ಸಿದ್ಧಪಡಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ವಿಧಾನ ಸಭಾಧ್ಯಕ್ಷರಾದ ಯು.ಟಿ ಖಾದರ್ ಅವರು, ಮಣ್ಣು ಸಮತಟ್ಟು ಸೇರಿದಂತೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ 3 ಮೀಟರ್ ಮಾತ್ರ ಆಳಕ್ಕೆ ಡ್ರಿಲ್ ಮಾಡಲು ಅವಕಾಶವಿದ್ದು, ಇದನ್ನ 6 ಮೀಟರ್ ಗೆ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈಗಾಗಲೇ ಕೆಲವು ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ. ಆದರೆ ಕೆಂಪುಕಲ್ಲು ಗಣಿಗಾರಿಕೆಗೆ ಕೆಲವು ನಿರ್ಭಂಧಗಳಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಲಭ ರೀತಿಯಲ್ಲಿ ಕೆಂಪುಕಲ್ಲು ಗ್ರಾಹಕರಿಗೆ ದೊರೆಯುವಂತಾಗಬೇಕು. ರಾಯಾಲ್ಟಿಯನ್ನ ಕಡಿಮೆಗೊಳಿಸಿ ನಿಯಮ ಬದ್ಧವಾಗಿ ಕಲ್ಲು ಗಣಿಗಾರಿಗೆಕೆ ಅವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಂಪುಕಲ್ಲು ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಿ ಎಂದ ಸಚಿವ ದಿನೇಶ್ ಗುಂಡೂರಾವ್