ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಶಾಸಕ ಹರೀಶ್ ಪೂಂಜರನ್ನು ಬೆಳ್ತಂಗಡಿ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆಗೊಳಿಸಿದ್ದಾರೆ.
ಪೂಂಜಾ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿದಂತೆ, ಇವರನ್ನು ವಿಚಾರಣೆಗಾಗಿ ಠಾಣೆಗೆ ಕರೆತರಲು, ಬೆಳ್ತಂಗಡಿ ಠಾಣಾ ಪೊಲೀಸರು ಮನೆಗೆ ತೆರಳಿದ್ದರು.
ಈ ವೇಳೆ ಸ್ಥಳದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳೀನ್ ಕುಮಾರ್ ಕಟೀಲ್ , ತಾನೇ ಖುದ್ದಾಗಿ ಹರೀಶ್ ಪೂಂಜಾರನ್ನು ವಿಚಾರಣೆಗೆ ಠಾಣೆಗೆ ಕಳುಹಿಸುವುದಾಗಿ ವಿನಂತಿಸಿಕೊಂಡಿದ್ದರು.
ಅದರಂತೆ ಸಂಸದರು ಆರೋಪಿತರಾದ ಹರೀಶ್ ಪೂಂಜಾರನ್ನು ಪೊಲೀಸರೊಂದಿಗೆ ಠಾಣೆಗೆ ಕಳುಹಿಸಿದ್ದಾರೆ. ಪ್ರಸ್ತುತ ಠಾಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ ಪೂಂಜಾರ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಬೆಳ್ತಂಗಡಿ ಠಾಣಾ 58/2024 , ಕಲಂ:143, 147, 341, 504, 506 ಜೊತೆಗೆ 149 ಐ.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿತ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರನ್ನು, ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿ, ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿರುತ್ತದೆ.